ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನಸಾಮಾನ್ಯರ ಜೇಬಿಗೆ ಕತ್ತರಿ; ಎಪ್ರಿಲ್ ನಂತರ ರಾಜ್ಯದ ಜನತೆಗೆ ಕರೆಂಟ್ ಶಾಕ್.!

ರಾಜ್ಯ

ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಶಾಕ್ ನೀಡಲು ರೆಡಿಯಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲು ವಿದ್ಯುತ್ ಸರಬರಾಜು ಕಂಪನಿಗಳು ಸಜ್ಜಾಗಿವೆ. ಸದ್ಯದಲ್ಲೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದ್ದು, ಜನರಿಗೆ ಕರೆಂಟ್ ಶಾಕ್ ಹೊಡೆಯುವುದು ಖಚಿತ.

ರಾಜ್ಯಕ್ಕೆ ವಿದ್ಯುತ್ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ಆದಾಯಕ್ಕಿಂತ ವೆಚ್ಚವೇ ಅಧಿಕವಾಗಿದ್ದು, ಕಂಪನಿಗಳು ನಷ್ಟದ ಹಳಿಯಲ್ಲಿವೆ. ಈ ನಷ್ಟವನ್ನು ಸರಿದೂಗಿಸಲು ಮತ್ತು ಕಂಪನಿಗಳ ನಿರ್ವಹಣೆಯನ್ನು ಸುಲಲಿತವಾಗಿ ನಡೆಸಲು ವಿದ್ಯುತ್ ದರವನ್ನು ಏರಿಕೆ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿವೆ. ಇದೇ ಕಾರಣಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಪ್ರತಿ ಯೂನಿಟ್ ವಿದ್ಯುತ್ ದರವನ್ನು ಬರೋಬ್ಬರಿ 1 ರೂಪಾಯಿಯಷ್ಟು ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಮನವಿ ಸಲ್ಲಿಸಿದೆ.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಎಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಸದ್ಯದಲ್ಲೇ ಸಾರ್ವಜನಿಕ ಅಹವಾಲುಗಳನ್ನು ಆಲಿಸಿ, ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುವುದು. ಮೂಲಗಳ ಪ್ರಕಾರ, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರುವ ಸಾಧ್ಯತೆ ಇದೆ. ಒಂದು ವೇಳೆ ಬೆಸ್ಕಾಂ ಮನವಿಯಂತೆ 1 ರೂಪಾಯಿ ಏರಿಕೆ ಆಗದಿದ್ದರೂ, ಕನಿಷ್ಠ 8 ರಿಂದ 10 ಪೈಸೆಯಷ್ಟಾದರೂ ಏರಿಕೆಯಾಗುವುದು ಖಚಿತ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದ ಜನತೆಗೆ ಕರೆಂಟ್ ಶಾಕ್ ಹೊಡೆಯುವುದಂತು ಗ್ಯಾರಂಟಿ.!