ಮಂಗಳೂರಿನ ಸ್ಟೇಟ್ಬ್ಯಾಂಕ್ ಸಮೀಪ ನಡೆದಿದ್ದ ಬೀದಿ ಬದಿ ವ್ಯಾಪಾರಿಯ ಮೇಲಿನ ಅವಹೇಳನಕಾರಿ ವರ್ತನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಸಂಬಂಧ ಇದೀಗ ಮಹಿಳೆಯೊಬ್ಬರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮ, ಭಾಷೆ ಹಾಗೂ ಇತರ ಗುರುತುಗಳ ಆಧಾರದ ಮೇಲೆ ದ್ವೇಷ ಮತ್ತು ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಮಾತುಕತೆ ನಡೆಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ನಗರದ ಸ್ಟೇಟ್ಬ್ಯಾಂಕ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಬೀದಿ ಬದಿ ವ್ಯಾಪಾರಿಯನ್ನು ಸಾರ್ವಜನಿಕವಾಗಿ ನಿಂದಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಈ ಘಟನೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.
ಘಟನೆ ನಡೆದ ದಿನ ಸ್ಥಳದಿಂದ ತೆರಳಿದ್ದ ಬೀದಿ ಬದಿ ವ್ಯಾಪಾರಿಯೊಬ್ಬರು ಶನಿವಾರ ಬಂದರು ಪೊಲೀಸ್ ಠಾಣೆಗೆ ಆಗಮಿಸಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಮಹಿಳೆ ಹಾಗೂ ಘಟನೆಯ ವಿಡಿಯೊ ಚಿತ್ರೀಕರಿಸಿದ್ದ ಕ್ಯಾಮರಾಮ್ಯಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು, ಕೇವಲ ಧರ್ಮದ ಆಧಾರದ ಮೇಲೆ ಮಾತ್ರವಲ್ಲದೆ ಜನ್ಮಸ್ಥಳ, ಪ್ರದೇಶ, ಭಾಷೆ ಅಥವಾ ಇತರ ಯಾವುದೇ ಗುರುತುಗಳ ಆಧಾರದ ಮೇಲೆ ವ್ಯಕ್ತಿ ಅಥವಾ ಸಮುದಾಯದ ವಿರುದ್ಧ ದ್ವೇಷ, ವೈಷಮ್ಯ ಅಥವಾ ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡುವ ಪ್ರಯತ್ನ ನಡೆಸಿದರೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 196ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ಕುರಿತು ಲಭ್ಯವಿರುವ ಪ್ರಾಥಮಿಕ ಮಾಹಿತಿಗಳು, ವಿಡಿಯೊ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಬಿಎನ್ಎಸ್ ಕಲಂ 196 ಹಾಗೂ 353ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಮುಂದಿನ ಹಂತದಲ್ಲಿ ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಬಗ್ಗೆ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಭಿಪ್ರಾಯ ಮತ್ತು ಕಳವಳವನ್ನು ವ್ಯಕ್ತಪಡಿಸುವ ಹಕ್ಕು ಇದೆ. ಆದರೆ ಆ ಹಕ್ಕಿನ ಬಳಕೆ ಕಾನೂನಿನ ಮಿತಿಯೊಳಗೆ ಇರಬೇಕು. ಯಾವುದೇ ವ್ಯಕ್ತಿ ಅಥವಾ ಸಮುದಾಯದ ವಿರುದ್ಧ ದ್ವೇಷ ಅಥವಾ ಉದ್ವಿಗ್ನತೆ ಸೃಷ್ಟಿಸುವ ರೀತಿಯ ವರ್ತನೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಘಟನೆ ನಡೆದ ದಿನ ಮಹಿಳೆ ಸಹ ಬೀದಿ ಬದಿ ವ್ಯಾಪಾರಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೊ ಸೇರಿದಂತೆ ಲಭ್ಯವಿದ್ದ ಮಾಹಿತಿಗಳನ್ನು ಪರಿಶೀಲನೆ ನಡೆಸಿದ್ದರು. ಆದರೆ ಆ ಸಂದರ್ಭದಲ್ಲಿ ಅಪರಾಧ ಪ್ರಕರಣ ದಾಖಲಿಸಲು ಅಗತ್ಯವಾದ ಅಂಶಗಳು ಕಂಡುಬರದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸದೆ, ಮಹಿಳೆಯ ದೂರನ್ನು ನಾನ್-ಕಾಗ್ನಿಜಿಬಲ್ (ಎನ್ಸಿ) ಪ್ರಕರಣವಾಗಿ ದಾಖಲಿಸಿ ಸ್ವೀಕೃತಿ ಪತ್ರವನ್ನು ನೀಡಲಾಗಿತ್ತು. ಬಳಿಕ ಅವರು ಕಾನೂನು ಪ್ರಕ್ರಿಯೆಯಂತೆ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ನಿರ್ದೇಶನದ ಮೇರೆಗೆ ಆ ದೂರಿನ ಕುರಿತೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
