ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ್ ಎಂಬವರಿಗೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಜಾಮೀನು ರಹಿತ ವಾರಂಟ್ ಹೊರಬೀಳುತ್ತಿದ್ದಂತೆ ಬಿಜೆಪಿ ಶಾಸಕ ಶರಣು ಸಲಗಾರ್ ಬಂಧನದ ಭೀತಿಯಿಂದ ದಿಢೀರ್ ನಾಪತ್ತೆಯಾಗಿದ್ದು, ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಶರಣು ಸಲಗಾರ್ ಅಲ್ಲಿಗೆ ತೆರಳಿ ಗಲಾಟೆ ಎಬ್ಬಿಸಿದ್ದರು. ಅ ವೇಳೆ ಸ್ಥಳದಲ್ಲಿ ದೊಡ್ಡ ಮಟ್ಟದ ಗಲಾಟೆ ನಡೆದಿತ್ತು. ಮನೆಯೊಂದಕ್ಕೆ ಅಕ್ರಮವಾಗಿ ನುಗ್ಗಿ ಪ್ರಶ್ನಿಸಿ ಗಲಾಟೆ ಮಾಡಿದ ಆರೋಪದ ಮೇಲೆ ಶಾಸಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕುರಿತು ಸಂಪೂರ್ಣ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಬೆಂಗಳೂರಿನ 42ನೇ ಎಸಿಜೆಎಂ (ACJM) ಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಶಾಸಕರಿಗೆ ಹಲವು ಭಾರಿ ಸೂಚಿಸಿತ್ತು. ಆದರೆ, ಶಾಸಕ ಶರಣು ಸಲಗಾರ್ ಕೋರ್ಟ್ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರು.
ನ್ಯಾಯಾಲಯದ ಆದೇಶವನ್ನು ಗಂಭೀರವಾಗಿ ಪರಿಗಣಿಸಿದ 42ನೇ ಎಸಿಜೆಎಂ ಕೋರ್ಟ್, ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಕೋರ್ಟ್ನಿಂದ ವಾರಂಟ್ ಆರ್ಡರ್ ಪ್ರತಿ ಕೈಸೇರುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಶಾಸಕರನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ, ಪೊಲೀಸರು ಬರುವ ಮುನ್ನವೇ ಶಾಸಕರು ಮನೆಯಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
