ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಗೊಂದಲಗಳಿಗೆ ತೆರೆ; ಹೊಸ ಮಾರ್ಗಸೂಚಿ

ರಾಜ್ಯ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಹೊಸ ಮಾರ್ಗಸೂಚಿ ಹೊರಡಿಸಿದೆ. ಸರ್ಕಾರದ ಯಾವುದೇ ಅಧಿಕಾರಿಗಳು, ನೌಕರರನ್ನು ವರ್ಗಾವಣೆ ಮಾಡುವಾಗ ಮುಂದಿನ ಹುದ್ದೆ ಸೂಚಿಸುವುದು ಕಡ್ಡಾಯವಾಗಿರುತ್ತದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರಿಗೆ ಸ್ಥಳ ನಿಯುಕ್ತಿ ಮಾಡದೆ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಕಳೆದ ಮಾರ್ಚ್ 30 ರಂದು ಸುತ್ತೋಲೆ ಹೊರಡಿಸಿತ್ತು.

ಆದರೆ, ಕೆಲವು ಸಂದರ್ಭದಲ್ಲಿ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಆಡಳಿತಾತ್ಮಕ ದೃಷ್ಟಿಯಿಂದ ಸ್ಥಳ ನಿಯುಕ್ತಿ ಸಾಧ್ಯವಾಗದೆ ಕಡ್ಡಾಯ ನಿರೀಕ್ಷಣೆಯಲ್ಲಿ ಇರಿಸುವುದರಿಂದ ಎದುರಾಗುವ ಆಡಳಿತಾತ್ಮಕವಾಗಿ ತೊಂದರೆ ಅರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರನ್ನು ವರ್ಗಾವಣೆ ಮಾಡುವಾಗ ಮುಂದಿನ ಹುದ್ದೆ ಸೂಚಿಸುವುದು ಕಡ್ಡಾಯವಾಗಿರುತ್ತದೆ ಎನ್ನಲಾಗಿದೆ.