ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ನೇಮಕಾತಿ ಆದೇಶ ರದ್ದು

ರಾಜ್ಯ

ಮುಖ್ಯಮಂತ್ರಿಯವರ ಸಚಿವಾಲಯದ ಮೂರನೇ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ಕಳೆದ ಜುಲೈ 8, 2026 ರಂದು ರಾಘವೇಂದ್ರ ಭಟ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ನೇಮಕಾತಿ ಪ್ರಕಟವಾಗುತ್ತಿದ್ದಂತೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸುತ್ತಿದ್ದ ವ್ಯಕ್ತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದಕ್ಕೆ ಪಕ್ಷದ ಒಳಗಡೆ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರ, ಆಡಳಿತಾತ್ಮಕ ಕಾರಣಗಳನ್ನು ನೀಡಿ ಸದ್ಯ ಅವರ ನೇಮಕಾತಿಯನ್ನು ತಡೆಹಿಡಿಯಲು ತೀರ್ಮಾನಿಸಿದೆ.

ರಾಘವೇಂದ್ರ ಭಟ್ ನೇಮಕಾತಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ವಿರುದ್ಧ ರಾಘವೇಂದ್ರ ಭಟ್ ಟೀಕಿಸಿದ್ದರು ಎನ್ನಲಾದ ಪೋಸ್ಟ್ ಇತ್ತೀಚೆಗೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಅವರ ನೇಮಕಾತಿಯನ್ನು ಅಮಾನತಿನಲ್ಲಿ ಇರಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.