ನಕಲಿ ಪಿಎಚ್ ಡಿ ಪ್ರಮಾಣ ಪತ್ರ ಪ್ರಕರಣ: 249 ಅತಿಥಿ ಉಪನ್ಯಾಸಕರು ಸೇವೆಯಿಂದ ವಜಾ; ಕಪ್ಪು ಪಟ್ಟಿಗೆ ಸೇರಿಸುವಂತೆ ಸರಕಾರದ ಆದೇಶ

ರಾಜ್ಯ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

2025-26ನೇ ಶೈಕ್ಷಣಿಕ ವರ್ಷದ ನೇಮಕಾತಿ ವೇಳೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಲಾಗಿತ್ತು. ನೇಮಕಾತಿಯ ಬಳಿಕ ಸರ್ಕಾರದ ಸೂಚನೆಯಂತೆ ಅಭ್ಯರ್ಥಿಗಳ ಸ್ನಾತಕೋತ್ತರ, NET, K-SET, M.Phil ಹಾಗೂ PhD ಸೇರಿದಂತೆ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಪರಿಶೀಲನೆಗಾಗಿ ಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಕಳುಹಿಸಲಾಗಿತ್ತು. ಪರಿಶೀಲನೆಯ ವೇಳೆ 249 ಅಭ್ಯರ್ಥಿಗಳು ಸಲ್ಲಿಸಿದ್ದ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಮಾನ್ಯತೆ ಇಲ್ಲದವು ಎಂದು ವಿಶ್ವವಿದ್ಯಾಲಯಗಳು ವರದಿ ಸಲ್ಲಿಸಿವೆ.

ಈ ವರದಿಯ ಆಧಾರದ ಮೇಲೆ ಸಂಬಂಧಪಟ್ಟ ಎಲ್ಲ ಅತಿಥಿ ಉಪನ್ಯಾಸಕರನ್ನು ತಕ್ಷಣದಿಂದಲೇ ಸೇವೆಯಿಂದ ವಜಾಗೊಳಿಸಲಾಗಿದೆ. ಈ ಹಗರಣದಲ್ಲಿ ಭಾಗಿಯಾಗಿರುವ 249 ಮಂದಿಯ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿ, ಒಂದು ವಾರದೊಳಗೆ ಪಾಲನಾ ವರದಿ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಎಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ.

2026-27ನೇ ಶೈಕ್ಷಣಿಕ ವರ್ಷದ ನೇಮಕಾತಿ ಸೇರಿದಂತೆ ಭವಿಷ್ಯದಲ್ಲಿ ನಡೆಯುವ ಯಾವುದೇ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಲು ಆದೇಶಿಸಲಾಗಿದೆ. ತನಿಖೆಯಲ್ಲಿ ಬಹಿರಂಗವಾದ ಮಾಹಿತಿಯ ಪ್ರಕಾರ, ವಜಾಗೊಂಡ 249 ಅತಿಥಿ ಉಪನ್ಯಾಸಕರ ಪೈಕಿ 148 ಮಂದಿ ಕಲ್ಯಾಣ ಕರ್ನಾಟಕ ಭಾಗದ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೀದರ್ ಜಿಲ್ಲೆಯ ಒಂದೇ ಸರ್ಕಾರಿ ಕಾಲೇಜಿನಲ್ಲಿ 19 ಮಂದಿ ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳ ಆಧಾರದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.