ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ

ಕರಾವಳಿ

ಬರ್ಕೆ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, 18 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಸೇರಿ ಕಳವು ಸೊತ್ತುಗಳ ವಶ.

ಮಂಗಳೂರು ನಗರದ ಅಳಕೆ ಕಂಬ್ಲ ಕ್ರಾಸ್ ರಸ್ತೆಯಲ್ಲಿರುವ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್ ನಲ್ಲಿರುವ ಮನೆಯೊಂದರಲ್ಲಿ ದಿ. 28-09-2026 ರಂದು ಮಧ್ಯಾಹ್ನ ಸುಮಾರು 3:00 ಗಂಟೆಯ ಸಮಯಕ್ಕೆ ಮನೆಯವರು ಮಾರುಕಟ್ಟೆಗೆ ತೆರಳಿ, ಸಂಜೆ ಸರಿ ಸುಮಾರು 5:00 ರ ಸಮಯಕ್ಕೆ ಮನೆಗೆ ಹಿಂದಿರುಗಿ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಒಳನುಗ್ಗಿದ ಕಳ್ಳರು ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಹಣ, ವಾಚ್ ಹಾಗೂ ಒಂದು ಟ್ರಾಲಿ ಬ್ಯಾಗ್ ಸೇರಿದಂತೆ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 121/2026 ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು.

ದಿನಾಂಕ: 27-09-2026 ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ಸರಹದ್ದಿ ಬೊಕ್ಕಪಟ್ನ ರಸ್ತೆಯ ಮನೆಯೊಂದರಲ್ಲಿ ಲಾಕರ್ ಹೊಡೆದು ಕಳವು ಮಾಡಲು ಯಾವುದೇ ಬೆಲೆಬಾಳುವ ಸೊತ್ತು ದೊರೆಯದೇ, ಚೆಕ್ ಪುಸ್ತಕಗಳನ್ನು ಕಳವು ಮಾಡಿದ್ದು, ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆ ಅ.ಕ್ರ 86/2026 ರಂತೆ ಪ್ರಕರಣ ದಾಖಲಾಗಿತ್ತು.

ಎರಡೂ ಪ್ರಕರಣಗಳ ಬಗ್ಗೆ ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಪೊಲೀಸ್ ವಿಶೇಷ ತಂಡ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿ, ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆ ಪ್ರಯಾಣಿಸಿದ ಬಗ್ಗೆ ಮಾಹಿತಿ ಪಡೆದು, ಮಂಗಳೂರು ಪೊಲೀಸ್ ತಂಡ ಗುಜರಾತಿನ ವಡೋದರಾ ಪೊಲೀಸರ ಸಹಾಯದೊಂದಿಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾದ 24 ಗಂಟೆಯೊಳಗೆ ವಡೋದರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು ಅರ್ಮಾನ್ ಖಾನ್ @ ಅಮನ್ ಸೋನಿ, ಗೋಕುಲ್ ಪುರಿ, ಈಶಾನ್ಯ ದೆಹಲಿ ಹಾಗೂ ಸಂಜೀವ್ ಕುಮಾರ್ @ ಜಾನಿ, ಸುಲ್ತಾನ್ ಪುರಿ, ನವದೆಹಲಿ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ಎಂಬಾತನ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ದ ವಾರಂಟ್ ಹಾಗೂ ಪ್ರೊಕ್ಲಮೇಶನ್ ಜಾರಿಯಲ್ಲಿದೆ.

ಆರೋಪಿಗಳಿಂದ ಕಳವು ಮಾಡಲಾಗಿದ್ದ ಎಲ್ಲಾ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಸುಮಾರು ರೂ. 18 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ಮಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಿದ್ದಾರೆ.